ಭ್ರಷ್ಟಾಚಾರ ಆರೋಪ: ಎಸ್‌ಐಟಿ ಅಧಿಕಾರಿ ವಿನೋದ್ ರೆಡ್ಡಿ ಸೇರಿ ಮೂವರು ಅಮಾನತು

ಬೆಳ್ತಂಗಡಿ: ಬುರುಡೆ ಪ್ರಕರಣದ ತನಿಖೆಗಾಗಿ ರಚಿಸಲಾಗಿದ್ದ ವಿಶೇಷ ತನಿಖಾ ತಂಡದಲ್ಲಿ (ಎಸ್‌ಐಟಿ) ಕಳೆದ ಒಂದು ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಸಬ್‌ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅವರನ್ನು ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸಿದ್ದ ವಿನೋದ್ ರೆಡ್ಡಿ ಅವರನ್ನು ಬಳಿಕ ಮುಂಡಗೋಡ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಆದರೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದ ಬಳಿಕ ಅವರು ಬೆಳ್ತಂಗಡಿಯಲ್ಲಿ ತಂಡದೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದರು.
ಈ ನಡುವೆ ಪೊಲೀಸ್ ಇಲಾಖೆಯ ವರ್ಗಾವಣೆ ಹಾಗೂ ಮಾಸಿಕ ವಸೂಲಿ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಸಿಬ್ಬಂದಿಗಳ ನಡುವೆ ನಡೆದ ಸಂಭಾಷಣೆ ಎನ್ನಲಾದ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆಡಿಯೋ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರು ಆಗಸ್ಟ್ 31ರಂದು ಪ್ರಾಥಮಿಕ ವಿಚಾರಣೆ ನಡೆಸಿದ್ದಾರೆ.
ವಿಚಾರಣೆಯ ಬಳಿಕ ಪಿಎಸ್ಐ ಕಿರಣ್ ಪಾಟೀಲ್, ಪಿಎಸ್ಐ ಕೃಷ್ಣ ಅರಿಕೆರೆ ಹಾಗೂ ಪಿಎಸ್ಐ ವಿನೋದ್ ರೆಡ್ಡಿ ಅವರನ್ನು ಅಮಾನತುಗೊಳಿಸಲಾಗಿದೆ.
ಆಡಿಯೋದಲ್ಲಿ ಕೇಳಿಬಂದಿರುವ ಆರೋಪಗಳ ಕುರಿತು ಇಲಾಖಾ ಮಟ್ಟದಲ್ಲಿ ತನಿಖೆ ಮುಂದುವರಿಯುವ ಸಾಧ್ಯತೆ ಇದ್ದು, ಪ್ರಕರಣದ ಮುಂದಿನ ಬೆಳವಣಿಗೆ ಕುತೂಹಲ ಮೂಡಿಸಿದೆ.































Leave a Comment

Your email address will not be published. Required fields are marked *

error: Content is protected !!
Scroll to Top