ಗುತ್ತಿಗಾರು, ಸೆ. 20: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಸುಳ್ಯ ತಾಲೂಕು ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಗುತ್ತಿಗಾರು ವಲಯದ ಜಂಟಿ ಆಶ್ರಯದಲ್ಲಿ, ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಗುತ್ತಿಗಾರು ವಲಯದ 10 ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸೆ. 20ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವೆಂಕಪ್ಪ ಗೌಡ ಅವರು ಮಾತನಾಡಿ, ತುಳು ಭಾಷೆಯನ್ನು ಅಧಿಕೃತ ರಾಜ್ಯದ ಎರಡನೇ ಭಾಷೆಯಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ಹರ್ಷ ವ್ಯಕ್ತಪಡಿಸಿದರು. ತುಳುವಿನಲ್ಲೇ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಚಾರಧಾರೆಗಳು ಹಾಗೂ ವಿವಿಧ ಕಾರ್ಯಕ್ರಮಗಳನ್ನು ಶ್ಲಾಘಿಸಿದರು.
ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ಯೋಜನೆಯ ವಿವಿಧ ಕಾರ್ಯಕ್ರಮಗಳಿಂದ ಸಮಾಜದ ಕಟ್ಟಕಡೆಯ ಜನರು ಹಾಗೂ ಮಹಿಳೆಯರು ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿದ್ದು, ಗ್ರಾಮಾಭಿವೃದ್ಧಿಯಲ್ಲಿ ಯೋಜನೆಯ ಪಾತ್ರ ಮಹತ್ವದ್ದಾಗಿದೆ ಎಂದರು.
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ವಿಶ್ವನಾಥ ರೈ ಕಳಂಜ ಅವರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳಿಗೆ ಶುಭ ಹಾರೈಸಿದರು.
ಸುಳ್ಯ ತಾಲೂಕು ಯೋಜನಾಧಿಕಾರಿ ಮಾಧವ ಗೌಡ ಮಾತನಾಡಿ, ಯೋಜನೆಯು ಜನರಲ್ಲಿ ಸಂಸ್ಕಾರ ಮತ್ತು ಸಂಸ್ಕೃತಿಯ ಅರಿವು ಮೂಡಿಸಿದೆ. ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಚಿಂತನೆಗಳು ಯೋಜನೆಯ ಆಸ್ತಿಯಾಗಿವೆ. ಜನಮಂಗಳ ಕಾರ್ಯಕ್ರಮಗಳು ಸಮಾಜದಲ್ಲಿರುವ ಅಶಕ್ತರಿಗೆ ಆಶಾಕಿರಣವಾಗಿವೆ. ವಿದ್ಯಾರ್ಥಿಗಳಿಗೆ ನೀಡುತ್ತಿರುವ ವಿದ್ಯಾರ್ಥಿವೇತನ ಹಾಗೂ ಸರ್ಕಾರಿ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರನ್ನು ಒದಗಿಸುವ ಕಾರ್ಯಕ್ರಮಗಳು ಸರ್ಕಾರಿ ಶಾಲೆಗಳಿಗೆ ಬಲ ತುಂಬಿವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಲಯ ಒಕ್ಕೂಟಗಳ ಅಧ್ಯಕ್ಷ ಯೋಗೀಶ್ ದೇವ ವಹಿಸಿದ್ದರು.
ವೇದಿಕೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ವಿಶ್ವನಾಥ ರೈ ಕಳಂಜ, ಜನಜಾಗೃತಿ ವೇದಿಕೆಯ ನಿಕಟಪೂರ್ವ ಜಿಲ್ಲಾಧ್ಯಕ್ಷ ಪಿ.ಸಿ. ಜಯರಾಮ, ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ವೆಂಕಪ್ಪ ಗೌಡ, ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಮಾಧವ ಗೌಡ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಭಾರತ ಸರ್ಕಾರದ ರಬ್ಬರ್ ಮಂಡಳಿ ಸದಸ್ಯ ಕೇಶವ ಭಟ್ ಮುಳಿಯ, ಮಂಜುನಾಥೇಶ್ವರ ಭಜನಾ ಪರಿಷತ್‌ನ ತಾಲೂಕು ಅಧ್ಯಕ್ಷ ಸೋಮಶೇಖರ್ ಪೈಕ, ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಗುತ್ತಿಗಾರು ಮುತ್ತಪ್ಪಶ್ವರ ದೇವಸ್ಥಾನದ ಅಧ್ಯಕ್ಷ ವೆಂಕಟ್ ವಳಲಂಬೆ ಹಾಗೂ ವಲಯ ಭಜನಾ ಪರಿಷತ್ ಅಧ್ಯಕ್ಷ ಪೂರ್ಣಚಂದ್ರ ಪೈಕ ಉಪಸ್ಥಿತರಿದ್ದರು.
ಗುತ್ತಿಗಾರು ವಲಯದ 10 ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

























