ಎಡಮಂಗಲ ಸರಕಾರಿ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

ಎಡಮಂಗಲ: ಪ್ರಜಾಧ್ವನಿ ಕರ್ನಾಟಕ ಹಾಗೂ ಎಡಮಂಗಲ ಸರಕಾರಿ ಪ್ರೌಢಶಾಲೆಯ ಸಹಯೋಗದಲ್ಲಿ ಮಹಾತ್ಮ ಗಾಂಧೀಜಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಅ.2ರಂದು ಶಾಲೆಯಲ್ಲಿ ಆಚರಿಸಲಾಯಿತು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜನಾರ್ಧನ ಪರ್ಲ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಬಳಿಕ ಅತಿಥಿಗಳು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿದರು.
ಶಾಲಾ ಮುಖ್ಯಮಂತ್ರಿ ಶ್ರೇಯಾ ಅವರು ಸಂವಿಧಾನದ ಪೀಠಿಕೆಯನ್ನು ವಾಚಿಸಿದರು. ಪ್ರಜಾಧ್ವನಿ ಕರ್ನಾಟಕದ ಸ್ಥಾಪಕ ಸದಸ್ಯ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನಿರ್ದೇಶಕ ಕೆ.ಪಿ. ಜಾನಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘಟನೆಯ ಆಶಯಗಳು ಹಾಗೂ ನಡೆಸಿಕೊಂಡು ಬರುತ್ತಿರುವ ಕಾರ್ಯಕ್ರಮಗಳ ಕುರಿತು ವಿವರಿಸಿದರು.
ಮುಖ್ಯ ಅತಿಥಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬ್ಬಲಡ್ಕ ಅವರು ಮಹಾತ್ಮ ಗಾಂಧೀಜಿ ಅವರ ಜೀವನ, ಸತ್ಯ, ಶಾಂತಿ ಮತ್ತು ಅಹಿಂಸೆಯ ತತ್ವಗಳ ಕುರಿತು ಮಾತನಾಡಿ, ಇಂದಿನ ಸಮಾಜದಲ್ಲಿಯೂ ಈ ಮೌಲ್ಯಗಳ ಪ್ರಸ್ತುತತೆಯನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.















Leave a Comment

Your email address will not be published. Required fields are marked *

error: Content is protected !!
Scroll to Top