ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಜನರಲ್ಲಿ ಶಿಸ್ತು, ಸ್ವಾವಲಂಬನೆ ಹಾಗೂ ಸಾಮಾಜಿಕ ಹೊಣೆಗಾರಿಕೆಯ ಮನೋಭಾವ ಬೆಳೆಸುವುದರೊಂದಿಗೆ ಹಲವು ಕುಟುಂಬಗಳ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆಗೆ ಕಾರಣವಾಗಿದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಕೇರ್ಪಳ ಬೂಡಿನ ಆಶಾ ಪ್ರಕಾಶ್ ಶೆಟ್ಟಿ ಬಂಟರ ಸಮುದಾಯ ಭವನದಲ್ಲಿ ಅ.5ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ದಕ್ಷಿಣ ಕನ್ನಡ ಜಿಲ್ಲೆ-2ರ ಸಹಯೋಗದಲ್ಲಿ ಗಾಂಧಿ ಜಯಂತಿ ಅಂಗವಾಗಿ ಆಯೋಜಿಸಿದ್ದ ಗಾಂಧಿಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣ ಕ್ಷೇತ್ರದ ಅಭಿವೃದ್ಧಿ ಹಾಗೂ ಗ್ರಾಮೀಣ ಶಾಲೆಗಳ ಸಂರಕ್ಷಣೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೀಡುತ್ತಿರುವ ಕೊಡುಗೆ ಶ್ಲಾಘನೀಯವಾಗಿದೆ. ಬಡ ಮತ್ತು ಹಿಂದುಳಿದ ಕುಟುಂಬಗಳಿಗೆ ಗೌರವಯುತ ಬದುಕು ಕಟ್ಟಿಕೊಳ್ಳಲು ವಿವಿಧ ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಿರುವುದು ಸಮಾಜದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಅವರು ಹೇಳಿದರು.
ದ.ಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು.
ಗಾಂಧೀಜಿಯವರ ತತ್ವಗಳು ಬದುಕಿಗೆ ದಾರಿದೀಪ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಮಾತನಾಡಿ, ಸತ್ಯ ಮತ್ತು ಅಹಿಂಸೆಯ ತತ್ವಗಳ ಮೂಲಕ ಮಹಾತ್ಮ ಗಾಂಧೀಜಿ ದೇಶಕ್ಕೆ ಹೊಸ ದಿಕ್ಕು ತೋರಿಸಿದ್ದಾರೆ. ನಮ್ಮ ಸಂಸ್ಕೃತಿ, ಮೌಲ್ಯಗಳು ಹಾಗೂ ಸಾಮಾಜಿಕ ಸಾಮರಸ್ಯವನ್ನು ಉಳಿಸಿಕೊಳ್ಳಲು ಗಾಂಧೀಜಿಯವರ ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.
ಮಹಿಳೆಯರ ಸಬಲೀಕರಣ ಮತ್ತು ಗ್ರಾಮೀಣ ಜನರ ಬದುಕಿನ ಸುಧಾರಣೆಗೆ ಪೂಜ್ಯ ಖಾವಂದರು ನೀಡಿದ ಮಾರ್ಗದರ್ಶನದಲ್ಲಿ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಗ್ರಾಮೀಣ ಶಾಲೆಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ವಿವಿಧ ವಿನೂತನ ಯೋಜನೆಗಳನ್ನು ಕೈಗೊಳ್ಳಲಾಗಿದ್ದು, ಮಕ್ಕಳಿಗೆ ಅನುಕೂಲವಾಗುವಂತೆ 75 ಸಾವಿರ ಬೆಂಚ್-ಡೆಸ್ಕ್ಗಳನ್ನು ಒದಗಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.
ದುಶ್ಚಟಗಳಿಂದ ಕುಟುಂಬ ಹಾಗೂ ಸಮಾಜದ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ತಡೆಯುವ ಉದ್ದೇಶದಿಂದ ಜನಜಾಗೃತಿ ಕಾರ್ಯಕ್ರಮಗಳು ಮತ್ತು ಮದ್ಯವರ್ಜನ ಶಿಬಿರಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಇದರ ಮೂಲಕ ಅನೇಕ ಕುಟುಂಬಗಳಲ್ಲಿ ಹೊಸ ಬದುಕಿನ ಭರವಸೆ ಮೂಡಿದೆ ಎಂದರು.
ಸುಳ್ಯ ತಾಲೂಕಿನಲ್ಲಿ ಗ್ರಾಮೀಣ ಬದುಕಿನ ಸೊಗಡು, ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿಕೊಂಡು ಅಭಿವೃದ್ಧಿಯತ್ತ ಸಾಗುವ ಸಂಕಲ್ಪವನ್ನು ಎಲ್ಲರೂ ಮಾಡಬೇಕು ಎಂದು ಅವರು ಕರೆ ನೀಡಿದರು.
ಸಾಮಾಜಿಕ ಪರಿವರ್ತನೆಗೆ ಧರ್ಮಸ್ಥಳದ ಕೊಡುಗೆ
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ದಕ್ಷಿಣ ಕನ್ನಡ ಜಿಲ್ಲೆ-2ರ ಅಧ್ಯಕ್ಷ ಎನ್. ವಿಶ್ವನಾಥ ರೈ ಕಳಂಜ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು ಸಂಘಟಿತವಾಗಿ ಒಂದೇ ಕುಟುಂಬದಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಹಾಗೂ ಸಮಾಜಮುಖಿ ಚಿಂತನೆಗಳನ್ನು ಕಾರ್ಯರೂಪಕ್ಕೆ ತರುವ ನಿಟ್ಟಿನಲ್ಲಿ ಸಂಸ್ಥೆಯ ವಿವಿಧ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿವೆ ಎಂದರು.
ಗ್ರಾಮೀಣ ಪ್ರದೇಶಗಳಲ್ಲಿ ಜನರ ಅಗತ್ಯಗಳಿಗೆ ಸ್ಪಂದಿಸುವ ಮೂಲಕ ಹಲವು ಸಮಾಜಮುಖಿ ಕಾರ್ಯಗಳನ್ನು ನಡೆಸಲಾಗುತ್ತಿದ್ದು, ಇವು ಜನರ ಜೀವನಮಟ್ಟ ಸುಧಾರಣೆಗೆ ಸಹಕಾರಿಯಾಗಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಸಂಘಟನಾಧ್ಯಕ್ಷ ನಟರಾಜ ಬಾದಾಮಿ, ಪುತ್ತೂರು ವಿಭಾಗದ ಪೊಲೀಸ್ ಉಪ ಅಧೀಕ್ಷಕ ಪ್ರಮೋದ್ ಕುಮಾರ್, ವೇದಿಕೆಯ ಸುಳ್ಯ ತಾಲೂಕು ಸ್ಥಾಪಕಾಧ್ಯಕ್ಷ ಎನ್.ಎ. ರಾಮಚಂದ್ರ, ದಕ್ಷಿಣ ಕನ್ನಡ ಜಿಲ್ಲಾ ಘಟಕದ ನಿಕಟಪೂರ್ವ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಸುಳ್ಯ ತಾಲೂಕು ಪ್ರಾಥಮಿಕ ಸಹಕಾರಿ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಬಂಟರ ಯಾನೆ ನಾಡವರ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ಸುಭಾಶ್ಚಂದ್ರ ರೈ ತೋಟ, ವೇದಿಕೆಯ ಅಧ್ಯಕ್ಷ ಎಂ. ವೆಂಕಪ್ಪ ಗೌಡ, ಕಡಬ ತಾಲೂಕು ಅಧ್ಯಕ್ಷ ಇಂದುಶೇಖರ ಶೆಟ್ಟಿ, ಪುತ್ತೂರು ತಾಲೂಕು ಅಧ್ಯಕ್ಷ ಸತೀಶ್ ನಾಯ್ಕ, ಕಾಸರಗೋಡು ತಾಲೂಕು ಅಧ್ಯಕ್ಷ ಜಯರಾಮ ಪಾಟಾಳಿ ಹಾಗೂ ಮಂಜೇಶ್ವರ ತಾಲೂಕು ಅಧ್ಯಕ್ಷ ಮಂಜುನಾಥ ಆಳ್ವ ಉಪಸ್ಥಿತರಿದ್ದರು.
ಸುಳ್ಯ ವಲಯದ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಅಧ್ಯಕ್ಷೆ ಸವಿತಾ ಸಂದೇಶ್ ಅವರು ‘ವೈಷ್ಣವ ಜನ ತೋ’ ಭಜನೆ ಹಾಡಿದರು.
ಆರತಿ ಪುರುಷೋತ್ತಮ್ ಪ್ರಾರ್ಥಿಸಿದರು. ದಕ್ಷಿಣ ಕನ್ನಡ ಜಿಲ್ಲೆ-2ರ ಜಿಲ್ಲಾ ನಿರ್ದೇಶಕ ಎ. ಬಾಬು ನಾಯ್ಕ ಸ್ವಾಗತಿಸಿದರು. ಸುಳ್ಯ ತಾಲೂಕು ಕಾರ್ಯದರ್ಶಿ ಮಾಧವ ಗೌಡ ವಂದಿಸಿದರು. ಕಡಬ ತಾಲೂಕು ಕಾರ್ಯದರ್ಶಿ ಪ್ರಕಾಶ್ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜನಜಾಗೃತಿ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.
ಅನುದಾನ ವಿತರಣೆ, ಸನ್ಮಾನ
ಸಮಾವೇಶದ ಅಂಗವಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಅನುದಾನ ವಿತರಿಸಿ ಗೌರವಿಸಲಾಯಿತು. ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಲಾಯಿತು.
ಶಾಸಕಿ ಭಾಗೀರಥಿ ಮುರುಳ್ಯ, ಪೊಲೀಸ್ ಉಪ ಅಧೀಕ್ಷಕ ಪ್ರಮೋದ್ ಕುಮಾರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಸಂಘಟನಾಧ್ಯಕ್ಷ ನಟರಾಜ ಬಾದಾಮಿ ಅವರನ್ನು ಸನ್ಮಾನಿಸಲಾಯಿತು.











