*ಸುಳ್ಯ:* ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನತೆಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಉದ್ದೇಶದಿಂದ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನ.12ರಂದು ತಾಲೂಕು ಮಟ್ಟದ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಸುಳ್ಯ ತಾಲೂಕು ಪಂಚಾಯತ್, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಸಹಯೋಗದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಉದ್ಯೋಗ ಮೇಳ ಆಯೋಜಿಸಲಾಗಿತ್ತು.
ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಮಿತಿ ಅಧ್ಯಕ್ಷ ಟಿ.ಎಂ. ಶಹೀದ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಗ್ರಾಮೀಣ ಭಾಗದ ಜನರ ಆಶೋತ್ತರಗಳಿಗೆ ರಾಜ್ಯ ಸರಕಾರ ಸ್ಪಂದಿಸುತ್ತಿದೆ. ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸರಕಾರದ ವಿವಿಧ ಇಲಾಖೆಗಳ ಮೂಲಕ ನೇಮಕಾತಿ ಪ್ರಕ್ರಿಯೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದರ ಪ್ರಯೋಜನವನ್ನು ಯುವ ಸಮುದಾಯ ಪಡೆದುಕೊಳ್ಳಬೇಕು. ವಿವಿಧ ಕಂಪೆನಿಗಳನ್ನು ಒಂದೇ ವೇದಿಕೆಗೆ ಕರೆತಂದು ಉದ್ಯೋಗಾಕಾಂಕ್ಷಿಗಳ ಮನೆಬಾಗಿಲಿಗೆ ಉದ್ಯೋಗಾವಕಾಶ ತಲುಪಿಸುವ ಕಾರ್ಯವನ್ನು ಗ್ಯಾರಂಟಿ ಸಮಿತಿ ಮಾಡುತ್ತಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗ್ಯಾರಂಟಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಮಾತನಾಡಿ, ಸುಳ್ಯದಲ್ಲಿ ಹೊಸ ಪ್ರಯತ್ನವಾಗಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗಕ್ಕಾಗಿ ಅಲೆದಾಡುತ್ತಿರುವ ಯುವಜನರಿಗೆ ಒಂದೇ ಸ್ಥಳದಲ್ಲಿ ವಿವಿಧ ಕಂಪೆನಿಗಳ ಪ್ರತಿನಿಧಿಗಳನ್ನು ಭೇಟಿಯಾಗಿ ತಮ್ಮ ಅರ್ಹತೆಗೆ ತಕ್ಕ ಉದ್ಯೋಗ ಪಡೆಯಲು ಅವಕಾಶ ಕಲ್ಪಿಸುವುದು ಇದರ ಉದ್ದೇಶವಾಗಿದೆ ಎಂದರು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ಎಸ್. ಗಂಗಾಧರ್ ಉದ್ಯೋಗ ಮೇಳದ ನೇತೃತ್ವ ವಹಿಸಿದ್ದರು.
ವೇದಿಕೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿದೋಜ, ಜಿಲ್ಲಾ ಗ್ಯಾರಂಟಿ ಸಮಿತಿ ಸದಸ್ಯ ರಂಜಿತ್ ರೈ ಮೇನಾಲ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಗ್ಯಾರಂಟಿ ಸಮಿತಿ ಸದಸ್ಯರಾದ ಮುಸ್ತಫಾ ಬೆಳ್ಳಾರೆ, ಸಂಧ್ಯಾ ದೋಳ, ಜೂಲಿಯಾನ ಕ್ರಾಸ್ತ, ಶಶಿಕಲಾ ದೇರಪ್ಪಜ್ಜನಮನೆ, ಪ್ರಮೋದ್ ಬೊಳ್ಳಾಜೆ, ಗಣೇಶ ನಾಗಪಟ್ಟಣ, ಜಂಶೀರ್ ಶಾಲೆಕ್ಕಾರ್, ಸನತ್ ಮುಳುಗಾಡು, ಸುರೇಶ್ ಎಂ.ಎಚ್., ಮಾಜಿ ಸದಸ್ಯ ಭವಾನಿಶಂಕರ ಕಲ್ಮಡ್ಕ, ಧನುಷ್ ಕುಕ್ಕೆಟ್ಟಿ, ಗೋಕುಲ್ ದಾಸ್ ಕೆ., ಚೇತನ್ ಕಜೆಗದ್ದೆ, ಮಹೇಶ್ ಬೆಳ್ಳಾರ್ಕರ್ ಹಾಗೂ ಶಹೀದ್ ಪಾರೆ ಉಪಸ್ಥಿತರಿದ್ದರು.
ತಿರುಮಲೇಶ್ವರಿ ಅರ್ಬಡ್ಕ ಪ್ರಾರ್ಥಿಸಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ಯಾರಂಟಿ ಸಮಿತಿ ಸದಸ್ಯೆ ಜೂಲಿಯಾನ ಕ್ರಾಸ್ತ ವಂದಿಸಿದರು.
ಉದ್ಯೋಗ ಮೇಳದಲ್ಲಿ 38ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸಿದ್ದು, ಉದ್ಯೋಗಾಕಾಂಕ್ಷಿಗಳಿಗೆ ಸಂಜೆ 4 ಗಂಟೆಯವರೆಗೆ ಕಂಪೆನಿಗಳ ಪ್ರತಿನಿಧಿಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿತ್ತು.






































