ಅರಂತೋಡಿನಲ್ಲಿ ಪೊಲೀಸ್ ಜನಸಂಪರ್ಕ ಸಭೆ: ಸಂಚಾರಿ ನಿಯಮ, ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ

ಅರಂತೋಡು: ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವ ಹಾಗೂ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ನ.27ರಂದು ಸಂಜೆ ಅರಂತೋಡಿನ ಅಮೃತ ಸಭಾಂಗಣದಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಜನಸಂಪರ್ಕ ಸಭೆ ನಡೆಯಿತು.











































































ಸಭೆಯ ಅಧ್ಯಕ್ಷತೆ ವಹಿಸಿದ್ದ ಸುಳ್ಯ ಪೊಲೀಸ್ ಠಾಣೆಯ ಉಪನಿರೀಕ್ಷಕ ಉದಯ ರವಿ ಅವರು ಸಂಚಾರಿ ನಿಯಮಗಳ ಪಾಲನೆ ಮತ್ತು ಸೈಬರ್ ಅಪರಾಧಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು.

ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸುವುದರಿಂದ ಅಪಘಾತದ ಸಂದರ್ಭದಲ್ಲಿ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಹೆಚ್ಚಿದೆ. ವಾಹನ ಚಾಲನೆ ವೇಳೆ ನಿರ್ಲಕ್ಷ್ಯ ವಹಿಸದೆ ಸಂಚಾರಿ ನಿಯಮಗಳನ್ನು ಪಾಲಿಸುವ ಮೂಲಕ ರಸ್ತೆ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಅವರು ಸಲಹೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ಕುರಿತು ಎಚ್ಚರಿಕೆ ವಹಿಸುವಂತೆ ತಿಳಿಸಿದ ಅವರು, ಅಪರಿಚಿತ ವ್ಯಕ್ತಿಗಳಿಂದ ಬರುವ ಕರೆ, ಸಂದೇಶ ಹಾಗೂ ಅನುಮಾನಾಸ್ಪದ ಲಿಂಕ್‌ಗಳನ್ನು ತೆರೆಯುವಾಗ ಜಾಗರೂಕರಾಗಿರಬೇಕು. ಯಾವುದೇ ಆಮಿಷಗಳಿಗೆ ಒಳಗಾಗಿ ಬ್ಯಾಂಕ್ ಖಾತೆಯ ವಿವರ, ಒಟಿಪಿ ಹಾಗೂ ವೈಯಕ್ತಿಕ ಮಾಹಿತಿಯನ್ನು ಅಪರಿಚಿತರಿಗೆ ನೀಡಬಾರದು ಎಂದು ಎಚ್ಚರಿಸಿದರು.

ಗ್ರಾಮ ವ್ಯಾಪ್ತಿಯಲ್ಲಿ ಕಾನೂನುಬಾಹಿರ ಚಟುವಟಿಕೆಗಳು ಅಥವಾ ಅನುಮಾನಾಸ್ಪದ ಘಟನೆಗಳು ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರ ನಡುವಿನ ಸಹಕಾರದಿಂದ ಗ್ರಾಮದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಸಾಧ್ಯ ಎಂದು ಹೇಳಿದರು.

ಸಭೆಯಲ್ಲಿ ವಿವಿಧ ಸಂಘ-ಸಂಸ್ಥೆಗಳ ಸದಸ್ಯರು, ನಿಕಟಪೂರ್ವ ಜನಪ್ರತಿನಿಧಿಗಳು, ಸ್ಥಳೀಯ ಆಟೋ ಚಾಲಕರು, ಅಂಗಡಿ ಮತ್ತು ಹೋಟೆಲ್ ಮಾಲಕರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top