ನೀಟ್ ಪರೀಕ್ಷೆಯಲ್ಲಿ ಉಂಟಾಗಿರುವ ಅಕ್ರಮದ ಕುರಿತು ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ,ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿವಿಧ ಗಣ್ಯರುಗಳನ್ನು ಕೇಂದ್ರ ಬಿಜೆಪಿ ಸರ್ಕಾರವು ಬಂಧಿಸಿ ಅವಮಾನಕಾರಿಯಾಗಿ ನಡೆದುಕೊಂಡಿರುವುದನ್ನು ಸಂಪಾಜೆ ವಲಯ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಸಂಯೋಜಕ ಕೆ.ಪಿ. ಜಾನಿಯವರು ತಿಳಿಸಿದ್ದಾರೆ.
ಜು 22 ರಂದು ಅವರು ಸುಳ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು ‘ಕೇಂದ್ರ ಬಿಜೆಪಿ ಸರಕಾರದವರು ಮಾಡುತ್ತಿರುವ ಅನ್ಯಾಯವನ್ನು ಕೇಳುವುದೇ ತಪ್ಪಾ ? ಎಂದು ಪ್ರಶ್ನಿಸಿದರು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಲಕ್ಷಾಂತರ ವಿದ್ಯಾರ್ಥಿಗಳ ಜೀವನ ಹಾಳಾಗಿದೆ. ಈಗಾಗಲೇ ಅನೇಕ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವಾಗ ಅವರಿಗೆ ಬೆಂಬಲವಾಗಿ ನಿಲ್ಲುವುದು ಎಲ್ಲರ ಧರ್ಮ ಮತ್ತು ಕರ್ತವ್ಯ. ಆಗಿರುವಾಗ ಕೇಂದ್ರವಿಪಕ್ಷ ನಾಯಕ ರಾಹುಲ್ ಗಾಂಧಿ ನಿಂತಿರುವುದು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪ್ರತಿಬಿಂಬಿಸುವಂತೆ ಮಾಡಿದೆ.
ಅಯೋಧ್ಯೆ ರಾಮಮಂದಿರದ ಕಾಣಿಕೆ ಡಬ್ಬಿ ಕಳ್ಳತನ ವಿಷಯದಲ್ಲಿ ಬಿಜೆಪಿಯವರು ಏಕೆ ಮೌನ ಪಾಲಿಸುತ್ತಿದ್ದಾರೆ.
ರಾಮಮಂದಿರದಲ್ಲಿ ನಡೆದಿರುವುದಾಗಿ ಆರೋಪಿಸಲಾಗುತ್ತಿರುವ ಖಜಾನೆ ಲೂಟಿ ಪ್ರಕರಣವನ್ನು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಒಳಪಡಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಆಗ್ರಹಿಸಿದರು.
ವಿಶ್ವದಲ್ಲಿ ನಡೆಯುವ ಬೇರೆ ಬೇರೆ ಘಟನೆಗೆ ಸಂಬಂಧಿಸಿ ಸಂವಾದಕ್ಕೆ ಹೋಗುವ ಪ್ರಧಾನಮಂತ್ರಿಯವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಕನಿಷ್ಠ ಸೌಜನ್ಯವನ್ನೂ ಮಾಡದೇ ಇರುವುದು ಇವರ ದುರಡಳಿತಕ್ಕೆ ಹಿಡಿದ ಕೈಗನ್ನಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ವಸಂತ ಪೆಡ್ಕ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞ ಗೂನಡ್ಕ, ಪ್ರಧಾನ ಕಾರ್ಯದರ್ಶಿ ಲೂಕಾಸ್ ಟಿ.ಐ., ಜ್ಞಾನಶೀಲನ್ ನೆಲ್ಲಿಕುಮೇರಿ, ಮಹಿಳಾ ಸಮಿತಿ ಅಧ್ಯಕ್ಷೆ ಲಲನ ಕೆ.ಆರ್. ಹಾಗೂ ಉಪಾಧ್ಯಕ್ಷೆ ಪ್ರಮೀಳ ಪೆಲ್ತಡ್ಕ ಉಪಸ್ಥಿತರಿದ್ದರು.
ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದ ಕಾಂಗ್ರೆಸ್ ನಾಯಕರನ್ನು ಬಂಧಿಸಿರುವುದು ಖಂಡನೀಯ





































































