ಸುಳ್ಯ: ಸಾಮರಸ್ಯ, ಸೌಹಾರ್ದತೆ ಹಾಗೂ ಒಗ್ಗಟ್ಟಿನ ಸಮಾಜವನ್ನು ನಿರ್ಮಿಸುವ ಉದ್ದೇಶದಿಂದ ‘ಭಾರತ್ ಜೋಡೋ ಯುವ ಸಂಘ’ಗಳನ್ನು ರಚಿಸಲು ಸರ್ಕಾರ ನಿರ್ಧರಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಹಾಗೂ ಯುವತಿಯರು ಸಂಘಟನೆಗೆ ನೋಂದಾಯಿಸಿಕೊಂಡು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಸ್ಥೆಯ ಜಿಲ್ಲಾಧ್ಯಕ್ಷರು ಹಾಗೂ ಭಾರತ್ ಜೋಡೋ ಯುವ ಸಂಘ ರಚನೆಯ ಜಿಲ್ಲಾ ಸಂಚಾಲಕರಾದ ಶುಭಾಷಚಂದ್ರ ಶೆಟ್ಟಿ ಕೊಳ್ನಾಡ್ ಹೇಳಿದರು.
ಸುಳ್ಯದ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ದೇಶದಲ್ಲಿ ಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಯುವಕರಲ್ಲಿ ಸಾಮಾಜಿಕ ಬದ್ಧತೆ, ಪರಸ್ಪರ ಗೌರವ, ಸಹಬಾಳ್ವೆ ಮತ್ತು ರಾಷ್ಟ್ರೀಯ ಏಕತೆಯ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಭಾರತ್ ಜೋಡೋ ಯುವ ಸಂಘಗಳ ರಚನೆಗೆ ಮುಂದಾಗಲಾಗಿದೆ ಎಂದು ಹೇಳಿದರು.
ಸಮಾಜದಲ್ಲಿ ಜಾತಿ, ಧರ್ಮ, ಭಾಷೆ ಸೇರಿದಂತೆ ವಿವಿಧ ವಿಚಾರಗಳ ಆಧಾರದಲ್ಲಿ ಉಂಟಾಗುವ ಭಿನ್ನಾಭಿಪ್ರಾಯಗಳನ್ನು ಮೀರಿ ಎಲ್ಲರನ್ನೂ ಒಗ್ಗೂಡಿಸುವ ಪ್ರಯತ್ನಕ್ಕೆ ಯುವಜನತೆ ಕೈಜೋಡಿಸಬೇಕು. ಯುವಕರು ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಆರೋಗ್ಯಕರ ಹಾಗೂ ಸಾಮರಸ್ಯಯುತ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಅವರು ಕರೆ ನೀಡಿದರು.
ಪ್ರತಿಯೊಂದು ಭಾಗದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಯುವಕ-ಯುವತಿಯರು ಭಾರತ್ ಜೋಡೋ ಯುವ ಸಂಘದೊಂದಿಗೆ ನೋಂದಾಯಿಸಿಕೊಳ್ಳಬೇಕು. ನೋಂದಣಿ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮೂಲಕ ಯುವಜನತೆ ಸಂಘಟನೆಯ ಆಶಯಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜನರ ಬಳಿಗೆ ಕೊಂಡೊಯ್ಯಬೇಕು. ಯುವಜನತೆಗೆ ದೊರೆಯುವ ಈ ಅವಕಾಶವನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ಶುಭಾಷಚಂದ್ರ ಶೆಟ್ಟಿ ಕೊಳ್ನಾಡ್ ಮನವಿ ಮಾಡಿದರು.
ಯುವಕರನ್ನು ಸಮಾಜದ ಮುಖ್ಯವಾಹಿನಿಗೆ ತರುವುದರ ಜೊತೆಗೆ ವಿವಿಧ ಸಾಮಾಜಿಕ ಹಾಗೂ ಜನಪರ ಚಟುವಟಿಕೆಗಳಲ್ಲಿ ಅವರ ಭಾಗವಹಿಸುವಿಕೆಯನ್ನು ಹೆಚ್ಚಿಸುವುದು ಈ ಪ್ರಯತ್ನದ ಪ್ರಮುಖ ಉದ್ದೇಶವಾಗಿದೆ. ಯುವಶಕ್ತಿ ಒಗ್ಗಟ್ಟಾಗಿ ಕಾರ್ಯನಿರ್ವಹಿಸಿದರೆ ಸಮಾಜದಲ್ಲಿ ಉತ್ತಮ ಬದಲಾವಣೆ ತರಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಸೂಡ ಅಧ್ಯಕ್ಷ ಕೆ.ಎಂ. ಮುಸ್ತಾಪ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ ಕಲ್ಮಡ, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ರಂಜಿತ್ ರೈ ಮೇನಾಲ, ದಿನೇಶ್ ಮೂಲೂರು, ಸಂತೋಷ್ ಭಂಡಾರಿ, ಎ.ಕೆ. ಹನೀಫ್ ಹಾಗೂ ಮಂಜುನಾಥ್ ಮಡ್ತಿಲ ಉಪಸ್ಥಿತರಿದ್ದರು.



















