ಆರೋಗ್ಯವಂತ ಯುವಜನತೆಯೇ ಸದೃಢ ಸಮಾಜದ ನಿರ್ಮಾಣಕ್ಕೆ ಬುನಾದಿ: ಡಾ. ಅನುರಾಧಾ ಕುರುಂಜಿ

ಸುಳ್ಯ: ಆರೋಗ್ಯವಂತ ಯುವಜನತೆಯೇ ಸದೃಢ ಸಮಾಜದ ನಿರ್ಮಾಣಕ್ಕೆ ಬುನಾದಿಯಾಗಿದ್ದು, ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಹಾಗೂ ವಲಯ ತರಬೇತುದಾರರಾದ ಡಾ. ಅನುರಾಧಾ ಕುರುಂಜಿ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಜ್ಜಾವರ ವಲಯ ಹಾಗೂ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಅಜ್ಜಾವರ ಇವುಗಳ ಸಂಯುಕ್ತ ಆಶ್ರಯದಲ್ಲಿ ಸೆ. 3ರಂದು ಸುಳ್ಯದ ಶ್ರೀ ಶಾರದ ಪ್ರೌಢಶಾಲೆಯಲ್ಲಿ ನಡೆದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.
ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದದ್ದು. ಹದಿಹರೆಯದ ವಯಸ್ಸಿನಲ್ಲಿ ಬೀಡಿ, ಸಿಗರೇಟು, ತಂಬಾಕು, ಗಾಂಜಾ ಹಾಗೂ ಮದ್ಯಪಾನದಂತಹ ದುಶ್ಚಟಗಳಿಗೆ ಯುವಜನತೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹ ದುಶ್ಚಟಗಳು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ಅವರ ಭವಿಷ್ಯವನ್ನೂ ಹಾಳುಮಾಡುತ್ತವೆ. ಆದ್ದರಿಂದ ದೈಹಿಕ, ಮಾನಸಿಕ, ಭಾವನಾತ್ಮಕ, ಸಾಮಾಜಿಕ ಹಾಗೂ ಧಾರ್ಮಿಕವಾಗಿ ಸ್ವಸ್ಥರಾಗಬೇಕು. ಸ್ವಾಮಿ ವಿವೇಕಾನಂದರಂತಹ ಯೂತ್ ಐಕಾನ್‌ಗಳ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಆದರ್ಶ ಪ್ರಜೆಗಳಾಗಿ ರೂಪುಗೊಳ್ಳಬೇಕು. ಸ್ವಾಸ್ತ್ಯ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕಿ ಭಾರತಿ ವಹಿಸಿದ್ದರು. ತಾಲೂಕಿನ ಕೇಂದ್ರ ಒಕ್ಕೂಟ ಸಮಿತಿ ಅಧ್ಯಕ್ಷ ಹಾಗೂ ಜನಜಾಗೃತಿ ವಲಯ ಅಧ್ಯಕ್ಷ ಸುರೇಶ್ ಕಣೆಮರಡ್ಕ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಬಳಿಕ ವಿದ್ಯಾರ್ಥಿಗಳಿಗೆ ಸ್ವಾಸ್ತ್ಯ ಸಂಕಲ್ಪದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಕಾರ್ಯಕ್ರಮದಲ್ಲಿ ಜನಜಾಗೃತಿ ಸದಸ್ಯ ಸುಬ್ಬಪಾಟಾಲಿ, ಜನಜಾಗೃತಿ ಸದಸ್ಯರು ಹಾಗೂ ಕಾಂತಮಂಗಲ ಒಕ್ಕೂಟದ ಅಧ್ಯಕ್ಷ ಸತೀಶ್ ಉಪಸ್ಥಿತರಿದ್ದರು.
ವಲಯ ಮೇಲ್ವಿಚಾರಕಿ ಅನಿತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಭವ್ಯ ಸ್ವಾಗತಿಸಿದರು. ಸೇವಾ ಪ್ರತಿನಿಧಿ ವೇದಾವತಿ ಧನ್ಯವಾದ ಸಮರ್ಪಿಸಿದರು.

































Leave a Comment

Your email address will not be published. Required fields are marked *

error: Content is protected !!
Scroll to Top