ಸುಳ್ಯ: ತೊಡಿಕಾನ ಗ್ರಾಮಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಕೊನೆಗೂ ಚಾಲನೆ ದೊರೆಯಲಿದ್ದು, ಸೆ.16ರಂದು ನೂತನ ಬಸ್ ರೂಟ್ ಆರಂಭಗೊಳ್ಳಲಿದ್ದು ಶಾಸಕರಾದ ಭಾಗೀರಥಿ ಮುರುಳ್ಯ ಸುಳ್ಯ ಬಸ್ ನಿಲ್ದಾನದಲ್ಲಿ ಚಾಲನೆ ನೀಡಲಿದ್ದಾರೆ ಎಂದು ಸುಳ್ಯ ಡಿಪೋ ಮ್ಯಾನೇಜರ್ ತಿಳಿಸಿದ್ದಾರೆ.
ನೂತನ ಬಸ್ ರೂಟ್‌ಗೆ ಬುಧವಾರ ಬೆಳಗ್ಗೆ 7.30ಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ
ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ,ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ,ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಬಳಿಕ ಬೆಳಗ್ಗೆ 8.30ಕ್ಕೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವಠಾರದಲ್ಲಿ ನೂತನ ಬಸ್‌ಗೆ ಸ್ಥಳೀಯರ ವತಿಯಿಂದ ಸ್ವಾಗತ ಕಾರ್ಯಕ್ರಮ ನಡೆಯಲಿದೆ.
ತೊಡಿಕಾನ ಭಾಗಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸೇವೆ ಆರಂಭಿಸಬೇಕೆಂಬುದು ಈ ಭಾಗದ ಜನರ ಹಲವು ವರ್ಷಗಳ ಪ್ರಮುಖ ಬೇಡಿಕೆಯಾಗಿತ್ತು. ಶಾಲಾ-ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಿಗಳು, ಹಿರಿಯ ನಾಗರಿಕರು ಸೇರಿದಂತೆ ಗ್ರಾಮಸ್ಥರಿಗೆ ಸಾರ್ವಜನಿಕ ಸರಕಾರಿ ಸಾರಿಗೆ ವ್ಯವಸ್ಥೆ ಇಲ್ಲದೆ ಹಲವು ವರ್ಷಗಳಿಂದ ಸಮಸ್ಯೆಯಾಗಿತ್ತು. ಇದೀಗ ಜನರ ಬಹುಕಾಲದ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ನೂತನ ಸರಕಾರಿ ಬಸ್ ಸೇವೆ ಆರಂಭವಾಗುತ್ತಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.

























