ಮಂಗಳೂರು: ಪಶ್ಚಿಮ ಘಟ್ಟ ಸಂರಕ್ಷಣೆಗೆ ಸಂಬಂಧಿಸಿದ ಕಸ್ತೂರಿ ರಂಗನ್ ವರದಿಯಿಂದ ಕರಾವಳಿ ಹಾಗೂ ಮಲೆನಾಡು ಭಾಗದ ರೈತರು ಮತ್ತು ಸ್ಥಳೀಯ ನಿವಾಸಿಗಳ ಬದುಕಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಲು ಅಥವಾ ಅನ್ಯಾಯವಾಗಲು ಸರ್ಕಾರ ಬಿಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು ಗುರುವಾರ ಸಂಜೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈ ಹಿಂದೆಯೇ ಸ್ಪಷ್ಟವಾಗಿ ತಿರಸ್ಕರಿಸಿದೆ ಎಂದು ಹೇಳಿದರು.
ಕೇಂದ್ರದಿಂದ ಬಂದಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಸ್ಥಳೀಯ ರೈತರಲ್ಲಿ ಆತಂಕ ಮೂಡಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ರೈತರು ಹಾಗೂ ಜನಸಾಮಾನ್ಯರ ಹಿತ ಕಾಪಾಡುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದರು.
ಕಸ್ತೂರಿ ರಂಗನ್ ವರದಿ ವಿಚಾರದ ಸೂಕ್ಷ್ಮತೆ ಹಾಗೂ ಗಂಭೀರತೆಯನ್ನು ಅರಿತು ವಿಧಾನಮಂಡಲದ ವಿಶೇಷ ಅಧಿವೇಶನ ಕರೆದು ಈ ಕುರಿತು ವಿಸ್ತೃತ ಚರ್ಚೆ ನಡೆಸಲಾಗುವುದು. ಅಧಿವೇಶನದ ಎರಡನೇ ದಿನವನ್ನು ಸಂಪೂರ್ಣವಾಗಿ ರೈತರ ಸಮಸ್ಯೆಗಳ ಚರ್ಚೆಗೆ ಮೀಸಲಿಟ್ಟು, ಎಲ್ಲಾ ಶಾಸಕರ ಅಭಿಪ್ರಾಯಗಳನ್ನು ದಾಖಲಿಸಿಕೊಳ್ಳಲಾಗುವುದು ಎಂದರು.
“ನಾನು ಖುದ್ದಾಗಿ ಬಾಧಿತ ಜಿಲ್ಲೆಗಳಿಗೆ ಭೇಟಿ ನೀಡಿ ಜನರ ಕಷ್ಟಗಳನ್ನು ಕಣ್ಣಾರೆ ಕಂಡಿದ್ದೇನೆ. ರೈತರು, ಸ್ಥಳೀಯ ನಿವಾಸಿಗಳು ಹಾಗೂ ಹೋರಾಟಗಾರರು ನೆಲಮಟ್ಟದಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಮಗೆ ಸ್ಪಷ್ಟ ಅರಿವಿದೆ. ಜನರ ಬದುಕಿಗೆ ಧಕ್ಕೆ ಬಾರದಂತೆ ಸರ್ಕಾರ ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ” ಎಂದು ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು.
ಕರಾವಳಿಯ ಪ್ರವಾಸೋದ್ಯಮಕ್ಕೆ ಉತ್ತೇಜನ
ದಕ್ಷಿಣ ಕನ್ನಡ ಸೇರಿದಂತೆ ಇಡೀ ಕರಾವಳಿ ಪ್ರದೇಶವು ಉತ್ತಮ ಮಾನವ ಸಂಪನ್ಮೂಲ, ಶಿಕ್ಷಣ, ಆರೋಗ್ಯ ಹಾಗೂ ನೈಸರ್ಗಿಕ ಸೌಂದರ್ಯವನ್ನು ಹೊಂದಿದೆ. ಕರಾವಳಿಯ ಕಡಲತೀರಗಳು ಮತ್ತು ಪ್ರವಾಸೋದ್ಯಮವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಮೂಲಕ ಸ್ಥಳೀಯ ಆರ್ಥಿಕತೆಗೆ ಮತ್ತಷ್ಟು ಬಲ ತುಂಬಲು ಸರ್ಕಾರ ಸಿದ್ಧವಿದೆ ಎಂದು ಹೇಳಿದರು.
ಸೆ.18ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕರಾವಳಿಯ ಆರ್ಥಿಕ ಮುನ್ನಡೆ, ಯುವಜನತೆಗೆ ಉದ್ಯೋಗ ಸೃಷ್ಟಿ ಹಾಗೂ ಪ್ರವಾಸೋದ್ಯಮ ನೀತಿಗೆ ಸಂಬಂಧಿಸಿದಂತೆ ಹಲವು ಮಹತ್ವದ ಯೋಜನೆಗಳಿಗೆ ಅನುಮೋದನೆ ದೊರೆಯುವ ವಿಶ್ವಾಸವಿದೆ ಎಂದರು.
ಇದೇ ವೇಳೆ ಉಮರ್ ಖಾಲಿದ್ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ನೀಡಿರುವ ಹೇಳಿಕೆ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, “ಆ ಹೇಳಿಕೆಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಈ ಬಗ್ಗೆ ನೀವೇ ಅವರ ಬಳಿ ಹೋಗಿ ಸ್ಪಷ್ಟನೆ ಕೇಳಬೇಕು” ಎಂದು ಹೇಳಿದರು.
ಕಸ್ತೂರಿ ರಂಗನ್ ವರದಿಯಿಂದ ರೈತರಿಗೆ ಅನ್ಯಾಯವಾಗಲು ಸರ್ಕಾರ ಬಿಡುವುದಿಲ್ಲ : ಡಿ.ಕೆ.ಶಿ

























