ಪುತ್ತೂರು: ದ. ಕ ಜಿಲ್ಲೆಯ ಸಹಕಾರ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಪುತ್ತೂರಿನ ದ. ಕ ಜೇನು ವ್ಯವಸಾಯಗಾರರ ಸಹಕಾರ ಸಂಘ ನಿಯಮಿತವು ರಾಜ್ಯಮಟ್ಟದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.
73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ನೀಡಲಾಗುವ ರಾಜ್ಯಮಟ್ಟದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿಗೆ ಸಂಘವು ಭಾಜನವಾಗಿದ್ದು, ಜಿಲ್ಲೆಯ ಸಹಕಾರ ಕ್ಷೇತ್ರಕ್ಕೆ ಹೆಮ್ಮೆಯ ಗರಿ ಮೂಡಿಸಿದೆ.
ನ. 20ರಂದು ಶುಕ್ರವಾರ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ಸಹಕಾರ ಸಚಿವರಾದ ಲಕ್ಷ್ಮಣ ಸವದಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಶಾಸಕರು ಹಾಗೂ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಜಿ.ಟಿ. ದೇವೇಗೌಡ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಉಭಯ ಜಿಲ್ಲೆಗಳ ಸಂಸದರು, ಶಾಸಕರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಸಹಕಾರ ಕ್ಷೇತ್ರದಲ್ಲಿ ಸಂಘವು ಮಾಡಿರುವ ಸಾಧನೆ, ಜೇನು ಕೃಷಿಕರಿಗೆ ನೀಡುತ್ತಿರುವ ಪ್ರೋತ್ಸಾಹ, ಸಹಕಾರ ಹಾಗೂ ಸಂಘದ ವಿವಿಧ ಚಟುವಟಿಕೆಗಳನ್ನು ಪರಿಗಣಿಸಿ ಈ ಪ್ರತಿಷ್ಠಿತ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ರಾಜ್ಯಮಟ್ಟದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿಗೆ ಪುತ್ತೂರಿನ ದ.ಕ ಜೇನು ವ್ಯವಸಾಯಗಾರರ ಸಹಕಾರ ಸಂಘ ಆಯ್ಕೆ








































