ಸುಳ್ಯ: ಸುಳ್ಯ ತಾಲೂಕು ಕೇಂದ್ರ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ ನವೆಂಬರ್ 25ರ ರಾತ್ರಿ ಗುಡುಗು ಸಹಿತ ಭಾರೀ ಮಳೆ ಸುರಿಯುತ್ತಿದೆ.
ಸಂಜೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ರಾತ್ರಿ ವೇಳೆ ಗುಡುಗು ಹಾಗೂ ಸಿಡಿಲಿನೊಂದಿಗೆ ಮಳೆ ಸುರಿದಿದೆ. ನವೆಂಬರ್ 25 ಮತ್ತು 26ರಂದು ದಕ್ಷಿಣ ಒಳನಾಡಿನ ಕರ್ನಾಟಕದ ಕೆಲವು ಭಾಗಗಳಲ್ಲಿ ಗುಡುಗು ಹಾಗೂ ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.
ಮಳೆಯ ನಡುವೆಯೇ ಸುಳ್ಯ ತಾಲೂಕು ಕೇಂದ್ರ ಸೇರಿದಂತೆ ಹಲವು ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುವಂತಾಯಿತು. ಗುಡುಗು ಸಹಿತ ಮಳೆಯ ಹಿನ್ನೆಲೆಯಲ್ಲಿ ಕೆಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿರುವುದಾಗಿ ವರದಿಯಾಗಿದೆ.








































